
ಪ್ರಬುದ್ಧ ಕರ್ನಾಟಕ ನ್ಯೂಸ್ 24
ಬೆಂಗಳೂರು: ನಾವು, ನೀವೆಲ್ಲ ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದೂ ಜನರ ತೆರಿಗೆ ಹಣದಿಂದಲೇ (Tax Money) ಅನ್ನೋದನ್ನ ಮರೆಯಬಾರದು. ಹಾಗಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತಹ ಅಧಿಕಾರಿಗಳ ವಿರುದ್ಧ ನಿಷ್ಠೂರವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳೊಂದಿಗೆ ನಡೆಸ ಸಭೆಯಲ್ಲಿ ಸಿಎಂ ಮಾತನಾಡಿದರು. ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಹಾಗಾಗಿ ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳೇ ನೇರಹೊಣೆಯಾಗುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದರು.

